5 ಸಾವಿರ ಲಂಚ ಸ್ವೀಕಾರ

ಅಗ್ನಿಶಾಮಕ ಅಧಿಕಾರಿ ಜಿ. ಮಹಾಲಿಂಗಪ್ಪ ಲೋಕಾಯುಕ್ತ ಬಲೆಗೆ

ಕಾರು ಸುಟ್ಟುಹೋದ ಪ್ರಕರಣದಲ್ಲಿ ವಿಮಾ ಕಂಪನಿಗೆ ಕ್ಲೇಮು ಮಾಡಲು ವರದಿ (ಫೈರ್ ರಿಪೋರ್ಟ್) ಕೊಡಲು 5000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಜಿ.ಮಹಾಲಿಂಗಪ್ಪ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಇಲ್ಲಿನ ಗೋಪಿಶೆಟ್ಟಿಕೊಪ್ಪದ ನಿವಾಸಿ ಇರ್ಷಾದ್ ಅವರು 2023ರ ಸೆಪ್ಟೆಂಬರ್ 25ರಂದು ರಾತ್ರಿ ತಮ್ಮ ಫೋರ್ಡ್ ಕಾರಿನಲ್ಲಿ ಮಂಡಗದ್ದೆಯಿಂದ ಶಿವಮೊಗ್ಗಕ್ಕೆ ಬರುವಾಗ 15ನೇ ಮೈಲಿಗಲ್ಲು ಬಳಿ ಅದಕ್ಕೆ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಹತ್ತಿಕೊಂಡಿತ್ತು ಎನ್ನಲಾಗಿದೆ.

ಕಾರಿನ ವಿಮಾ ಮೊತ್ತ ಪಡೆಯಲು ಇರ್ಷಾದ್, ಯುನೈಟೆಡ್ ಇನ್ಶೂರೆನ್ಸ್ ಕಂಪನಿಗೆ ಕ್ಲೇಮು ಮಾಡಿದ್ದರು. ಅದಕ್ಕೆ ಅಗತ್ಯವಿರುವ ವರದಿ ಪಡೆಯಲು ಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಸಂಪರ್ಕಿಸಿದ್ದರು. ವರದಿ ಕೊಡಲು ಮಹಾಲಿಂಗಪ್ಪ ಲಂಚ ಕೇಳಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಇರ್ಷಾದ್‌, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶಿವಮೊಗ್ಗದ ಜಿಲ್ಲಾ ಅಗ್ನಿಶಾಮಕ ಠಾಣೆಯ ಕಚೇರಿಯಲ್ಲಿ ಮಹಾಲಿಂಗಪ್ಪ ಲಂಚದ ಮೊತ್ತ ಪಡೆಯುವಾಗ ಲೋಕಾಯುಕ್ತ ಡಿವೈಎಸ್ಪಿ ಉಮೇಶ ಈಶ್ವರ ನಾಯ್ಕ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚದ ಹಣದೊಂದಿಗೆ ಸಿಕ್ಕಿಬಿದ್ದ ಮಹಾಲಿಂಗಪ್ಪ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post