ಯಶಸ್ವಿಯಾಗಿ ನಡೆದ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ತೀರ್ಥಹಳ್ಳಿಯಲ್ಲಿ ಅಂಧತ್ವ ಮುಕ್ತ ಅಭಿಯಾನ

ತೀರ್ಥಹಳ್ಳಿ ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ತಾಲ್ಲೂಕಿನ ವಿವಿಧ ಇಲಾಖೆಗಳು, ಪಟ್ಟಣ ಪಂಚಾಯತ್, ಲಯನ್ಸ್ ಕ್ಲಬ್  ಮತ್ತು ರೋಟರಿ ಕ್ಲಬ್‌ಗಳ ಸಹಯೋಗದಲ್ಲಿ ಅಂಧತ್ವ ಮುಕ್ತ ಶಿವಮೊಗ್ಗ ಕಾರ್ಯಕ್ರಮದಡಿಯಲ್ಲಿ ತೀರ್ಥಹಳ್ಳಿಯ ಶಾಂತವೇರಿ ಗೋಪಾಲ ಗೌಡ ರಂಗ ಮಂದಿರದಲ್ಲಿ ನಡೆದ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಟ್ಟಣ ಪಂಚಾಯತ್ ಅಧ್ಯಕ್ಷ ರಹಮತ್‌ ಉಲ್ಲಾ ಅಸಾದಿ, ದೃಷ್ಟಿ ದೋಷವನ್ನು ಪತ್ತೆ ಹಚ್ಚಿ  ಕನ್ನಡಕಗಳ ಅಗತ್ಯ ಇರುವವರಿಗೆ ಉಚಿತ ಕನ್ನಡಗಳನ್ನು ನೀಡುವುದರ ಜೊತೆಗೆ ಹೆಚ್ಚಿನ ಚಿಕಿತ್ಸೆ ಅಗತ್ಯ ಉಳ್ಳವರಿಗೆ ಉನ್ನತ ಆಸ್ಪತ್ರೆಗಳಲ್ಲಿಯೂ ಉಚಿತ ಚಿಕಿತ್ಸೆ ನೀಡುವ ಈ ಯೋಜನೆ ಅತ್ಯಂತ ಮಾದರಿಯಾದದ್ದು ಎಂದರು. ಮುಂದುವರೆದು ಜನರಿಗೆ ಹೆಚ್ಚಿನ ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸುವತ್ತ ಪಟ್ಟಣ ಪಂಚಾಯಿತಿಯೂ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳನ್ನು ಕಾರ್ಯಗತಗೊಳಿಸಲಾಗುವುದು ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅನಿಕೇತನ್, ಈ ಕಾರ್ಯಕ್ರಮ ದೇಶದಲ್ಲೇ ಪ್ರಥಮ ಬಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಅನುಷ್ಟಾನಗೊಂಡಿದ್ದು. 30 ವರ್ಷ ಮೇಲ್ಪಟ್ಟ ಎಲ್ಲರನ್ನೂ ತಪಾಸಣೆಗೊಳಪಡಿಸಿ ಅಗತ್ಯ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುವುದು. ಬಹಳ ಮುಖ್ಯವಾಗಿ ದುಬಾರಿ ಚಿಕಿತ್ಸೆಗಳಾದ ಡಯಾಬಿಟೀಸ್ ರೆಟಿನೋಪತಿ, ಗ್ಲುಕೋಮ ಸಮಸ್ಯೆಗಳಿಗೂ ಈ ಕಾರ್ಯಕ್ರಮದಡಿಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಮೊದಲ ಹಂತದಲ್ಲಿ ಆಶಾ ಕಾರ್ಯಕರ್ತೆಯರು ಮನೆ ಭೇಟಿ ಮಾಡಿ ಕಣ್ಣಿನ ಸಮಸ್ಯೆಗಳನ್ನು ಪತ್ತೆ ಹಚ್ಚಿ ದ್ವಿತೀಯ ಹಂತದ ತಪಾಸಣೆಗೆ ಶಿಫಾರಸು ಮಾಡುತ್ತಾರೆ. ಅಲ್ಲಿಯೂ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಉನ್ನತ ಮಟ್ಟದ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನಡೆಸಲಾಗುವುದು ಎಂದರು.
ಈ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳು, ಪಟ್ಟಣ ಪಂಚಾಯತ್, ಲಯನ್ಸ್, ರೋಟರಿ ಸಂಸ್ಥೆಗಳು ಉತ್ತಮ ಸಹಕಾರ ನೀಡಿದ್ದಾರೆ ಅವರೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಭಟ್, ರೋಟರಿ ಕ್ಲಬ್ ಅಧ್ಯಕ್ಷ ಭರತ್ ಅತಿಥಿಗಳಾಗಿದ್ದರು. ವಿವಿಧ ಸಂಘ ಸಂಸ್ಥೆಗಳ ಪದಾದಿಕಾರಿಗಳು, ಆರೋಗ್ಯ ಇಲಾಖಾ ಸಿಬ್ಬಂದಿಗಳು, ಫಲಾನುಭವಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ ಟಿ.ವಿ ಸ್ವಾಗತಿಸಿ, ನಿರೂಪಿಸಿದರು. ಬಿಪಿಎಂ ಗಿರಿ ಡಿ.ಟಿ ವಂದಿಸಿದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post