ಎಪಿಎಂಸಿ ಆವರಣದಲ್ಲಿ ಡಿಸಿಸಿ ಬ್ಯಾಂಕ್‌ ಶಾಖೆ ಉದ್ಘಾಟನೆ

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಆರ್ಥಿಕತೆಗೆ ಸಹಕಾರಿ - ಆರಗ ಜ್ಞಾನೇಂದ್ರ

ತೀರ್ಥಹಳ್ಳಿಯ ಎಪಿಎಂಸಿ ಆವರಣದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ನೂತನ ಶಾಖೆಯನ್ನು ಶಾಸಕ ಆರಗ ಜ್ಞಾನೇಂದ್ರ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಗುರುವಾರ ಉದ್ಘಾಟಿಸಿ ಅವರು ಮಾತನಾಡಿ, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳಿಂದ ಮಾರುಕಟ್ಟೆಯಲ್ಲಿ ಆರ್ಥಿಕ ವಹಿವಾಟು ನಿರ್ಭಿತಿಯಿಂದ ನಡೆಯುತ್ತದೆ. ಡಿಸಿಸಿ ಬ್ಯಾಂಕ್‌ ಹೊಸ ಶಾಖೆಯಿಂದ ಮಂಡಿ ವರ್ತಕರು, ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಕೃಷಿ ಉತ್ಪನ್ನ ಮಾರಾಟ ಮಾಡುವ ರೈತರು ಚೆಕ್‌ ನೀಡಿ ನೇರವಾಗಿ ಹಣ ಪಡೆಯಲು ಸಹಾಯವಾಗುತ್ತದೆ. ಭಾರತ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಹಿಂದೆ ಇಂತಹ ಅನೇಕ ಸಂಸ್ಥೆಗಳ ಯೋಗದಾನವಿದೆ. ಕೇಂದ್ರ ಸರ್ಕಾರದಿಂದ ಸಹಕಾರ ಸಂಸ್ಥೆಗಳನ್ನು ಕಟ್ಟುವ ನಿಟ್ಟಿನಲ್ಲಿ ಅನೇಕ ಕ್ರಾಂತಿಕಾರಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಕೃಷಿ ಇಲಾಖೆಯಿಂದ ಬೇರ್ಪಡಿಸಿ ಪ್ರತ್ಯೇಕ ಇಲಾಖೆಯನ್ನು ಆರಂಭಿಸಲಾಗಿದೆ. ಹಣಕಾಸು ಸಂಸ್ಥೆಗಳನ್ನು ಸದೃಢ ಪಡಿಸುವಲ್ಲಿ ಶ್ರಮಿಸುತ್ತಿದೆ ಎಂದರು.

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮಾತನಾಡಿ, ಪಟ್ಟಣದ ಆಜಾದ್‌ ರಸ್ತೆಯ ಶಾಖೆ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಅಲ್ಲಿನ ಒತ್ತಡ ತಗ್ಗಿಸುವುದು, ವಾಹನ ನಿಲುಗಡೆ, ಖಾತೆ ಬಳಕೆದಾರರ ಪ್ರಮಾಣ ಹಿತ ದೃಷ್ಟಿಯಿಂದ ಎಪಿಎಂಸಿ ಆವರಣದಲ್ಲಿ ಶಾಖೆ ಆರಂಭಿಸಲಾಗಿದೆ. ಗ್ರಾಹಕರಿಗೆ ತ್ವರಿತ ಸೇವೆ ಒದಗಿಸಲು ನೂತನ ಶಾಖೆ ಸಹಕಾರಿಯಾಗಿದೆ ಎಂದರು.

ಶಿಮುಲ್‌ ಅಧ್ಯಕ್ಷ ವಿದ್ಯಾಧರ್‌, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಬಸವಾನಿ ವಿಜಯದೇವ್‌, ಪರಮೇಶ್ವರಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ಪ್ರಮುಖರಾದ ಮಹಾಬಲೇಶ್ವರ ಹೆಗಡೆ, ರೇವತಿ ಅನಂತಮೂರ್ತಿ, ಸುಷ್ಮ ಸಂಜಯ್‌, ಜ್ಯೋತಿ ಮೋಹನ್‌, ಸುಶೀಲ ಶೆಟ್ಟಿ, ಅಜಿತ್‌ ಎಚ್.ವಿ. ಮತ್ತಿತರರು ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post